ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಕೇಂದ್ರದ ವಿರುದ್ಧ ಸಿಎಂ ಕಿಡಿ
ಹೊಸ ತಲೆಮಾರಿನ ಮಕ್ಕಳಲ್ಲಿ ಬದಲಾವಣೆ ತರುವುದಕ್ಕಾಗಿ ‘ಮೊಬೈಲ್ ಬಿಡಿ – ಪುಸ್ತಕ ಹಿಡಿ ಮತ್ತು ಓದು ಕರ್ನಾಟಕ’ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು. 79ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತನಾಡಿದರು.
ಜಾತಿ ಗಣತಿಯ ಅಗತ್ಯ ಒತ್ತಿಹೇಳಿದ ಸಿದ್ದರಾಮಯ್ಯ
ಪ್ರಾದೇಶಿಕ ಅಸಮಾನತೆಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿರುವ ನಮ್ಮ ಸರ್ಕಾರವು ಪ್ರೊ.ಗೋವಿಂದರಾವ್ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿದೆ. ಆ ಸಮಿತಿಯು ವರದಿಯನ್ನು ನೀಡಿದ ಕೂಡಲೇ ಅದನ್ನು ಅನುಷ್ಠಾನ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ಸಿಎಂ ಹೇಳಿದರು. ಅಲ್ಲದೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಅಗತ್ಯವನ್ನು ಒತ್ತಿಹೇಳಿದರು.
ನಕ್ಸಲ್ ನಿಗ್ರಹ ಕಾರ್ಯಾಚರಣೆಯ ಬಗ್ಗೆ ಉಲ್ಲೇಖಿಸಿದ ಅವರು, ರ್ನಾಟಕವನ್ನು ನಕ್ಸಲ್ ಮುಕ್ತ ರಾಜ್ಯವೆಂದು ಘೋಷಿಸಿದ್ದೇವೆ. ಹಾಗೆಯೇ ನಾವೆಲ್ಲರೂ ನಮ್ಮ ಹೆಮ್ಮೆಯ ರಾಜ್ಯವನ್ನು ಡ್ರಗ್ಸ್ ಮುಕ್ತ ರಾಜ್ಯವನ್ನಾಗಿ ಘೋಷಿಸಬೇಕಾಗಿದೆ. ಈ ಹೋರಾಟದಲ್ಲಿ ಪ್ರತಿ ಪ್ರಜೆಯೂ ಯೋಧರಂತೆ ಕೆಲಸ ಮಾಡಬೇಕಾಗಿದೆ. ಸರ್ಕಾರವು ಈಗಾಗಲೇ ಈ ವಿಚಾರದಲ್ಲಿ ಸಕಲ ಆಯಾಮಗಳಲ್ಲಿ ಕೆಲಸ ಮಾಡುತ್ತಿದೆ ಎಂದರು.
ಕೇಂದ್ರದ ವಿರುದ್ಧ ಸಿದ್ದರಾಮಯ್ಯ ಕಿಡಿ
ಒಕ್ಕೂಟ ಸರ್ಕಾರವು ತೆರಿಗೆ ಮುಂತಾದ ಸಂಪನ್ಮೂಲಗಳನ್ನು ಹಂಚುವಾಗ ನಿಷ್ಪಕ್ಷಪಾತದ ಧೋರಣೆ ಅನುಸರಿಸುತ್ತಿಲ್ಲ. ಐಟಿ, ಇ.ಡಿ, ಸಿಬಿಐ ಮತ್ತು ಕೆಲವು ಸಾಂವಿಧಾನಿಕ ಸಂಸ್ಥೆಗಳು ಪ್ರಜಾಪ್ರಭುತ್ವದ ಹಾಗೂ ಸಂವಿಧಾನದ ನೈಜ ಮೌಲ್ಯಗಳ ಉಳಿವಿಗಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂಬ ಆಕ್ರೋಶವು ವಿವಿಧ ವೇದಿಕೆಗಳಿಂದ ವ್ಯಕ್ತವಾಗುತ್ತಿದೆ. ಈ ಕುರಿತು ಜವಾಬ್ದಾರಿಯುಳ್ಳ ನಾಗರಿಕರೆಲ್ಲ ಧ್ವನಿಯೆತ್ತಬೇಕಾಗಿದೆ ಎಂದು ಸಿದ್ದರಾಮಯ್ಯ ಕರೆ ನೀಡಿದರು. ಅಲ್ಲದೆ, ಕೇಂದ್ರದಿಂದ ಸಾಕಷ್ಟು ಪ್ರಮಾಣದಲ್ಲಿ ಯೂರಿಯಾ ಹಂಚಿಕೆ ಆಗುತ್ತಿಲ್ಲ. ಇದನ್ನು ಸರಿಪಡಿಸಬೇಕು ಎಂದು ಆಗ್ರಹಿಸಿದರು.
ಜಮ್ಮಿ ಮತ್ತು ಕಾಶ್ಮೀರದ ಪಹಲ್ಗಾಮ್ ದಾಳಿಯಲ್ಲಿ ಮಡಿದವರು, ಪಾಕ್ ವಿರುದ್ಧ ಹೋರಾಡಿ ಮಡಿದವರಿಗೂ ಸಿದ್ದರಾಮಯ್ಯ ಗೌರವ ಅರ್ಪಿಸಿದರು.
ಗ್ಯಾರಂಟಿ ಯೋಜನೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಕರ್ನಾಟಕವು ಈಗ ತಲಾದಾಯದ ವಿಚಾರದಲ್ಲಿ ಮೊದಲ ಸ್ಥಾನದಲ್ಲಿದೆ. ತಲಾದಾಯದಲ್ಲಿ ಕಳೆದ ಹತ್ತು ವರ್ಷಗಳಲ್ಲಿ ಶೇ 101 ರಷ್ಟು ಪ್ರಗತಿಯನ್ನು ಸಾಧಿಸಿದ ರಾಜ್ಯ ನಮ್ಮ ಕರ್ನಾಟಕವಾಗಿದೆ. 2013-14 ರಲ್ಲಿ ಸ್ಥಿರ ದರಗಳಲ್ಲಿ 1,01,858 ರೂಪಾಯಿಗಳಷ್ಟಿದ್ದ ತಲಾದಾಯವು 2024-25 ರ ವೇಳೆಗೆ 2,04,605 ರೂಪಾಯಿಗಳಿಗೆ ತಲುಪಿದೆ ಎಂದರು.
