ಧರ್ಮಸ್ಥಳ ಪ್ರಕರಣ ಸಂಬಂಧ ತಪ್ಪು ಸಂದೇಶ ಪ್ರಚಾರದ ತಡೆಯಲ್ಲಿ ಸರ್ಕಾರ ವಿಫಲ : ಬಿ.ವೈ ವಿಜಯೇಂದ್ರ
ಧರ್ಮಸ್ಥಳ : ಗ್ರಾಮದಲ್ಲಿ ಸಾಮೂಹಿಕ ಅಂತ್ಯಕ್ರಿಯೆ ನಡೆದಿದೆ ಎಂಬ ಸುದ್ದಿಗಳ ನಡುವಲ್ಲೇ ದೇವಾಲಯ ಆಡಳಿತದೊಂದಿಗೆ ಒಗ್ಗಟ್ಟನ್ನು ವ್ಯಕ್ತಪಡಿಸುವ ಸಂಕೇತವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದ ಬಿಜೆಪಿ ನಿಯೋಗ ಭಾನುವಾರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಅವರನ್ನು ಭೇಟಿ ಮಾಡಿತು.
ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಎಂಎಲ್ಸಿ ಸಿಟಿ ರವಿ, ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಪಕ್ಷದ ಶಾಸಕರು ನಿಯೋಗದಲ್ಲಿದ್ದರು. ನಿಯೋಗವು ಧರ್ಮಾಧಿಕಾರಿಯನ್ನು ಭೇಟಿ ಮಾಡುವ ಮೊದಲು ದೇವಾಲಯಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿತು.
ನಂತರ, ದೇವಾಲಯದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ ಅವರು, ಪ್ರಸ್ತುತ ಹರಡುತ್ತಿರುವ “ತಪ್ಪು ಮಾಹಿತಿ”ಯನ್ನು ತಡೆಯಲು ರಾಜ್ಯ ಸರ್ಕಾರ ತ್ವರಿತವಾಗಿ ಕಾರ್ಯನಿರ್ವಹಿಸಬೇಕಾಗಿತ್ತು. ಆದರೆ, ಅದರ ಬದಲು ಮೌನ ತಾಳಿದೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಕರ್ತವ್ಯದಲ್ಲಿ ವಿಫಲರಾಗಿದ್ದಾರೆ. ಧರ್ಮಸ್ಥಳ, ಮಂಜುನಾಥ ಸ್ವಾಮಿ ಮತ್ತು ಅಣ್ಣಪ್ಪ ಸ್ವಾಮಿಯ ಮಾನಹಾನಿಯನ್ನು ನಿಲ್ಲಿಸದಿದ್ದಕ್ಕಾಗಿ ಜನರ ಕ್ಷಮೆಯಾಚಿಸಬೇಕು. ಬಿಜೆಪಿ ಈ ವಿಷಯವನ್ನು ರಾಜಕೀಯಗೊಳಿಸುತ್ತಿಲ್ಲ. ಬದಲಿಗೆ ಈ ಗೊಂದಲವನ್ನು ಕೊನೆಗೊಳಿಸಬೇಕೆಂದು ಒತ್ತಾಯಿಸುತ್ತಿದೆ ಎಂದು ಹೇಳಿದರು.
