ಬೆಂಗಳೂರು: ಕಳೆದ ಮೂರು ದಿನಗಳಿಂದ ಭಾರೀ ಮಳೆ ಆಗುತ್ತಿದೆ. ಕೆಲವು ಜಿಲ್ಲೆಗಳಲ್ಲಿ ಸುರಿದ ಧಾರಾಕಾರ ಮಳೆಗೆ ಹಳ್ಳಗಳು ಉಕ್ಕಿಹರಿಯುತ್ತಿವೆ. ಜಮೀನುಗಳಿಗೂ ನೀರು ನುಗ್ಗಿ ಅಪಾರ ಬೆಳೆ ಹಾಳಾಗಿದೆ. ಈ ಮಧ್ಯೆ ಕರ್ನಾಟಕದಲ್ಲಿ ಇನ್ನೂ ಸೆ. 22 ರವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಯಾವೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೊಡಗು, ಹಾಸನ, ಕೋಲಾರ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಜೊತೆಗೆ ಕರಾವಳಿ ಜಿಲ್ಲೆಗಳು ಅಂದರೆ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಭಾಗದಲ್ಲಿ ಹೆಚ್ಚು ಮಳೆಯಾಗಲಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಟ ಮತ್ತು ಕನಿಷ್ಟ ತಾಪಮಾನ ಕ್ರಮವಾಗಿ 27°C ಮತುೆ 20°C ಇರುವ ಸಾಧ್ಯತೆ ಇದೆ. ನಿನ್ನೆ ರಾಜ್ಯದಲ್ಲಿ ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ಬೆಂಗಳೂರು ನಗರ, ಕೋಲಾರ, ಗದಗ, ದಕ್ಷಿಣ ಕನ್ನಡ ಮತ್ತು ಉಡುಪಿ ಸೇರಿದಂತೆ 18 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಆಗಿದೆ. ವಿಜಯಪುರ, ಕೊಪ್ಪಳ ಮತ್ತು ತುಮಕೂರಿನಲ್ಲಿ ಸಾಧಾರಣ ಮಳೆ ಸುರಿದಿದೆ.
