2nd Airport V Somanna letter to Centre: ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆಯಿಂದ ವಿಮಾನ ಪ್ರಯಾಣಿಕರ ಪರದಾಟ ತಪ್ಪಿಸಲು 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ಸ್ಥಳದ ಗೊಂದಲಗಳಿದ್ದು, ಇನ್ನೂ ಸ್ಥಳ ಫೈನಲ್ ಆಗಿಲ್ಲ. ಆದರೆ ಕೆಲವು ರಾಜಕಾರಣಿಗಳು ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ಕನಕಪುರದಲ್ಲಿ ವಿಮಾನ ನಿಲ್ದಾಣ ಮಾಡುವ ಬಗ್ಗೆ ಹೇಳುತ್ತಿದ್ದರೆ, ಮತ್ತೆ ಕೆಲವರು ಬೇರೆ ಮಾಡಿ ಎಂಬ ಕೂಗುಗಳು ಕೇಳಿಬರುತ್ತಿವೆ. ತುಮಕೂರಿನ ಶಿರಾ ಬಳಿ ನೂತನ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದರಿಂದ ಮಧ್ಯ ಕರ್ನಾಟಕ ಭಾಗ ಪ್ರಗತಿ ಪಥದಲ್ಲಿ ಸಾಗಲು ಸಾಧ್ಯವಾಗಲಿದೆ ಎಂದು ವಿ. ಸೋಮಣ್ಣ ತಿಳಿಸಿದ್ದಾರೆ.
ಬೆಂಗಳೂರು, ಜು.18: ವಿಮಾನ ನಿಲ್ದಾಣ ಎಲ್ಲಿ ನಿರ್ಮಾಣ ಮಾಡಬೇಕೆಂಬ ಚರ್ಚೆಗಳು ನಡೆಯುತ್ತಿರುವಾಗಲೇ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ವಿ. ಸೋಮಣ್ಣ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ತುಮಕೂರಿನ ಶಿರಾದಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಬೇಕು ಎಂದು ಕೇಂದ್ರ ವಿಮಾನಯಾನ ಸಚಿವರಿಗೆ ಪತ್ರ ಬರೆದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ವಿ. ಸೋಮಣ್ಣ ಒತ್ತಾಯಿಸಿದ್ದಾರೆ.

ರಾಜ್ಯ ಸರ್ಕಾರ ನಿರ್ಮಿಸಲು ಉದ್ದೇಶಿಸಿರುವ ನೂತನ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತುಮಕೂರು ಜಿಲ್ಲೆಯ ಶಿರಾ ಬಳಿ ನಿರ್ಮಿಸಬೇಕೆಂಬುದು ರಾಜ್ಯದ ಬಹುತೇಕ ಜನಪ್ರತಿನಿಧಿಗಳ ಒತ್ತಾಯವಾಗಿದೆ. ಶಿರಾದಲ್ಲಿ ನೂತನ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದರಿಂದ ಮಧ್ಯ ಕರ್ನಾಟಕ ಹಾಗೂ ಉತ್ತರ ಕರ್ನಾಟಕದ ಪ್ರಮುಖ ಜಿಲ್ಲೆಗಳ ಪ್ರಗತಿಗೆ ಸಹಾಯಕವಾಗಲಿದೆ ಎಂದು ತಿಳಿಸಿದ್ದಾರೆ.
ಈ ಬಗ್ಗೆ ಕಳೆದ ವರ್ಷದ ಮಾರ್ಚ್ 20 ರಂದು ತುಮಕೂರು, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಹಾವೇರಿ ಹಾಗೂ ರಾಯಚೂರು ಸೇರಿದಂತೆ ಪ್ರಮುಖ ಜಿಲ್ಲೆಗಳ ಶಾಸಕರು ನನಗೆ ಪತ್ರ ಬರೆದು ಒತ್ತಾಯಿಸಿದ್ದರು. ಆ ಭಾಗವಾಗಿಯೇ ಅದೇ ವರ್ಷದ ಏಪ್ರಿಲ್ 22ರಂದು ಕೇಂದ್ರದ ನಾಗರಿಕ ವಿಮಾನಯಾನ ಸಚಿವರಾದ ಕೆ. ರಾಮಮೋಹನ ನಾಯ್ಡು ಅವರಿಗೆ ಪತ್ರ ಬರೆದು ಈ ಭಾಗದ ಜನಪ್ರತಿನಿಧಿಗಳ ಒತ್ತಾಸೆಯನ್ನು ಅವರ ಗಮನಕ್ಕೆ ತಂದಿರುವುದಾಗಿ ಮಾಹಿತಿ ನೀಡಿದ್ದಾರೆ.
ಈಗಾಗಲೇ ಕರ್ನಾಟಕ ರಾಜ್ಯವು ಬೆಂಗಳೂರು ಕೇಂದ್ರಿತವಾಗಿ ಅಭಿವೃದ್ಧಿ ಸಾಧಿಸಿದೆ. ಬೆಂಗಳೂರಿಗೆ ಪರ್ಯಾಯವಾಗಿ ರಾಜ್ಯದ ಎಲ್ಲಾ ಭಾಗಗಳನ್ನು, ನಗರಗಳನ್ನು ಸಶಕ್ತವಾಗಿ ಬೆಳೆಸುವುದು ಜನಪ್ರತಿನಿಧಿಗಳೆಲ್ಲರ ಜವಾಬ್ದಾರಿಯೂ ಹೌದು. ಆ ಹಿನ್ನೆಲೆಯಲ್ಲಿ ಮತ್ತೊಂದು ವಿಮಾನ ನಿಲ್ದಾಣವನ್ನು ಬೆಂಗಳೂರಿನ ಸಮೀಪ ನಿರ್ಮಿಸಿದರೆ, ಉತ್ತರ ಮತ್ತು ಮಧ್ಯ ಕರ್ನಾಟಕದ ಅಭಿವೃದ್ಧಿಗೆ ನ್ಯಾಯ ಸಂದಂತೆ ಆಗುವುದಿಲ್ಲ ಎಂದಿದ್ದಾರೆ.
ತುಮಕೂರಿನ ಶಿರಾ ಬಳಿ ನೂತನ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದರಿಂದ ಮಧ್ಯ ಕರ್ನಾಟಕ ಭಾಗ ಪ್ರಗತಿ ಪಥದಲ್ಲಿ ಸಾಗಲು ಸಾಧ್ಯವಾಗಲಿದೆ. ಶಿರಾದ ಸುತ್ತುಮುತ್ತ ಮುಂಬೈ–ಬೆಂಗಳೂರು ಕೈಗಾರಿಕಾ ಕಾರಿಡಾರ್, ರಾಷ್ಟ್ರೀಯ ಹೂಡಿಕೆ ಮತ್ತು ಉತ್ಪಾದನಾ ವಲಯ (NIMZ), ಚೆನ್ನೈ–ಬೆಂಗಳೂರು ಕೈಗಾರಿಕಾ ಕಾರಿಡಾರ್ ಹಾಗೂ KIADB ಕೈಗಾರಿಕಾ ಪ್ರದೇಶಗಳಿವೆ. NH-48, NH-69, NH-544E ಸೇರಿದಂತೆ ಹಲವು ರಾಷ್ಟ್ರೀಯ ಹೆದ್ದಾರಿಗಳು, ರಾಜ್ಯ ಹೆದ್ದಾರಿಗಳು ಹಾಗೂ ಹೊಸ ರೈಲು ಮಾರ್ಗಗಳ ಸಾರಿಗೆ ಸಂಪರ್ಕ ಜಾಲವೂ ಬಲವಾಗಿದೆ ಎಂದು ತಿಳಿಸಿದ್ದಾರೆ.
ಹೆಚ್ಚಿನ ಪ್ರಮಾಣದ ಸರ್ಕಾರಿ ಭೂಮಿ ಲಭ್ಯವಿದ್ದು, ಭದ್ರಾ ಮೇಲ್ದಂಡೆ ಕಾಲುವೆ, ಹೇಮಾವತಿ ಮತ್ತು ಎತ್ತಿನಹೊಳೆ ಯೋಜನೆಗಳಿಂದ ನೀರಿನ ಲಭ್ಯತೆಯ ಜೊತೆಗೆ ಚಿತ್ರದುರ್ಗದ DRDO, IISc ಕ್ಯಾಂಪಸ್ ಹಾಗೂ ತುಮಕೂರಿನ ಗುಬ್ಬಿಯ HAL ಹೆಲಿಕಾಪ್ಟರ್ ಘಟಕಗಳೂ ಅತ್ಯಂತ ಸಮೀಪದಲ್ಲಿ ಕಾರ್ಯನಿರ್ವಹಿಸುತ್ತಿವೆ. ಶಿರಾದ ಈ ಸ್ಥಳವು DGCA ಯ ನಿಯಮಕ್ಕನುಗುಣವಾಗಿ ಬೆಂಗಳೂರು ವಿಮಾನ ನಿಲ್ದಾಣದಿಂದ ಸುಮಾರು 150 ಕಿ.ಮೀ ದೂರವಿದೆ. ಅಲ್ಲದೇ, ಇದರಿಂದಾಗಿ ಮಧ್ಯ ಮತ್ತು ಉತ್ತರ ಕರ್ನಾಟಕದ ಜನರಿಗೆ ಅಂತಾರಾಷ್ಟ್ರೀಯ ಪ್ರಯಾಣ ಹಾಗೂ ಸರಕು ಸಾಗಣೆಗೆ ಅನುಕೂಲವಾಗಲಿದೆ. ಕೈಗಾರಿಕೆ, ಉದ್ಯೋಗ, ಹೂಡಿಕೆ ಮತ್ತು ಪ್ರಾದೇಶಿಕ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ದೊರಕಲಿದ್ದು, ರಾಜ್ಯದ ಸಮತೋಲಿತ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಸಚಿವರು ಮನವರಿಕೆ ಮಾಡಿಕೊಟ್ಟಿದ್ದಾರೆ.
ರಾಜ್ಯದ ಸಮಗ್ರ ಅಭಿವೃದ್ಧಿಯ ಹಿತದೃಷ್ಠಿಯಿಂದ ತುಮಕೂರಿನ ಶಿರಾ ಭಾಗದಲ್ಲಿಯೇ ನೂತನ ವಿಮಾನ ನಿಲ್ದಾಣ ನಿರ್ಮಿಸುವಂತೆ ಕೇಂದ್ರ ವಿಮಾನಯಾನ ಸಚಿವರನ್ನು ಒತ್ತಾಯಿಸಿದ್ದೇನೆ. ರಾಜ್ಯ ಸರ್ಕಾರವು ರಾಜ್ಯದ ಸಮಗ್ರ ಅಭಿವೃದ್ಧಿಯನ್ನೇ ಮಾನದಂಡವನ್ನಾಗಿ ಇಟ್ಟುಕೊಂಡು ಚಿಂತನೆ ನಡೆಸಬೇಕೆಂದು ಸೋಮಣ್ಣ ಮನವಿ ಮಾಡಿದ್ದಾರೆ.
