ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಪತ್ನಿ ಚೆನ್ನಮ್ಮರ ಆರೋಗ್ಯ ಸ್ಥಿತಿ ಇದೀಗ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. ಕಳೆದ 4 ದಿನಗಳಿಂದ ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರಿಗೆ ತಜ್ಞ ವೈದ್ಯರ ತಂಡ ನಿರಂತರ ಚಿಕಿತ್ಸೆ ನೀಡುತ್ತಿದೆ.
ನಿನ್ನೆ ಚೆನ್ನಮ್ಮ ಅವರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ದೇವೇಗೌಡ್ರ ಕುಟುಂಬದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರು ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರಿಂದ ಆರೋಗ್ಯದ ಮಾಹಿತಿ ಪಡೆದರು. ತೀವ್ರ ಉಸಿರಾಟದ ತೊಂದರೆ ಹಿನ್ನೆಲೆಯಲ್ಲಿ ಕುಟುಂಬ ಸದಸ್ಯರು ಆತಂಕ ವ್ಯಕ್ತಪಡಿಸಿದ್ದರು. ಸೊಸೆ ಭವಾನಿ ರೇವಣ್ಣ ಅವರು ರಾತ್ರಿಯಿಡೀ ಆಸ್ಪತ್ರೆಯಲ್ಲೇ ಉಳಿದು ಚೆನ್ನಮ್ಮ ಅವರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿದ್ದಾರೆ.
ಸದ್ಯ ಚೆನ್ನಮ್ಮ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಶೀಘ್ರ ಚೇತರಿಸಿಕೊಂಡು ಮನೆಗೆ ಮರಳುವ ವಿಶ್ವಾಸವನ್ನು ಕುಟುಂಬಸ್ಥರು ವ್ಯಕ್ತಪಡಿಸಿದ್ದಾರೆ. ಇಂದು ಬೆಳಗ್ಗೆ 8 ಗಂಟೆಗೆ ವೈದ್ಯರ ತಂಡ ಮತ್ತೊಮ್ಮೆ ಆರೋಗ್ಯ ತಪಾಸಣೆ ನಡೆಸಿದ್ದು, ಬಳಿಕ ಅಧಿಕೃತ ಆರೋಗ್ಯ ಮಾಹಿತಿ ಹೊರಬೀಳುವ ಸಾಧ್ಯತೆಯಿದೆ.
