ಪರಿಹಾರ, ಪೊಲೀಸ್ ಕ್ರಮ ಮತ್ತು ಪ್ರತಿಭಟನಾಕಾರರ ವಿರುದ್ಧದ ಪ್ರಕರಣಗಳ ವಾಪಸಾತಿಗೆ ಸಿಜೆಪಿ ಆಗ್ರಹ
ನವದೆಹಲಿ, ಜು. 25: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯ ನಡುವೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದರೂ, ತಮ್ಮ ಮೂರು ಪ್ರಮುಖ ಬೇಡಿಕೆಗಳು ಇನ್ನೂ ಈಡೇರಿಲ್ಲ ಎಂದು ಕಾಕ್ರೋಚ್ ಜನತಾ ಪಕ್ಷ (CJP) ತಿಳಿಸಿದೆ.
ಸಿಜೆಪಿ ಅಧ್ಯಕ್ಷ ಅಭಿಜೀತ್ ದೀಪ್ಕೆ ಮತ್ತು ವಕ್ತಾರ ಸೌರವ್ ದಾಸ್ ಈ ಕುರಿತು ಪ್ರತಿಕ್ರಿಯಿಸಿದ್ದು, ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಯು ಪ್ರತಿಭಟನಾಕಾರರ ಪ್ರಮುಖ ಬೇಡಿಕೆಗಳಲ್ಲಿ ಒಂದಾಗಿತ್ತು. ಆದರೆ, ಉಳಿದ ಬೇಡಿಕೆಗಳನ್ನು ಕೇಂದ್ರ ಸರ್ಕಾರ ತಕ್ಷಣವೇ ಈಡೇರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ನೀಟ್ ಪರೀಕ್ಷೆ ರದ್ದತಿ ಹಾಗೂ ಪರೀಕ್ಷಾ ವಿವಾದದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಅಭ್ಯರ್ಥಿಗಳ ಕುಟುಂಬಗಳಿಗೆ ತಲಾ ₹1 ಕೋಟಿ ಪರಿಹಾರ ನೀಡಬೇಕು ಎಂಬುದು ಸಿಜೆಪಿಯ ಮೊದಲ ಬೇಡಿಕೆಯಾಗಿದೆ. ಜುಲೈ 20ರಂದು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮತ್ತು ದೌರ್ಜನ್ಯ ನಡೆಸಿದ ಆರೋಪ ಎದುರಿಸುತ್ತಿರುವ ಪೊಲೀಸ್ ಸಿಬ್ಬಂದಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಜೊತೆಗೆ, ವಿದ್ಯಾರ್ಥಿಗಳಲ್ಲಿ ಸರ್ಕಾರ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಸಿಜೆಪಿ ಒತ್ತಾಯಿಸಿದೆ.
ಹೋರಾಟದ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮತ್ತು ಪ್ರತಿಭಟನಾಕಾರರ ವಿರುದ್ಧ ದಾಖಲಿಸಲಾಗಿರುವ ಎಲ್ಲ ಎಫ್ಐಆರ್ಗಳು ಹಾಗೂ ಕಾನೂನು ಪ್ರಕರಣಗಳನ್ನು ತಕ್ಷಣವೇ ಹಿಂಪಡೆಯಬೇಕು ಎಂಬುದು ಪಕ್ಷದ ಮೂರನೇ ಪ್ರಮುಖ ಬೇಡಿಕೆಯಾಗಿದೆ. ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಪ್ರಜಾಪ್ರಭುತ್ವದ ಗೆಲುವಾಗಿದ್ದರೂ, ಉಳಿದ ಮೂರು ಬೇಡಿಕೆಗಳು ಈಡೇರುವವರೆಗೂ ಪ್ರತಿಭಟನೆ ಮತ್ತು ಹೋರಾಟ ಮುಂದುವರಿಯಲಿದೆ ಎಂದು ಸಿಜೆಪಿ ನಾಯಕರು ಸ್ಪಷ್ಟಪಡಿಸಿದ್ದಾರೆ.

