ಶೌಚಾಲಯದ ಮುಂಭಾಗದಲ್ಲೇ ಮುಳ್ಳಿನ ಕಂಠಿಗಳು ಬೆಳೆದು ನಿಂತಿರುವುದರಿಂದ ವಿದ್ಯಾರ್ಥಿಗಳು, ಅದರಲ್ಲೂ ಮುಖ್ಯವಾಗಿ ವಿದ್ಯಾರ್ಥಿನಿಯರು ತೀವ್ರ ಪರದಾಟ ನಡೆಸುವಂತಾಗಿದೆ.
ಗದಗ, ಜು.28: ಶಿರಹಟ್ಟಿ ಪಟ್ಟಣದ ಶ್ರೀ ಬನಶಂಕರಿ ದೇವಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮೂಲಸೌಕರ್ಯ ಕಲ್ಪಿಸುವಂತೆ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು. 2021-22ನೇ ಸಾಲಿನಲ್ಲಿ ಗ್ರಾಮ ಪಂಚಾಯತ್ನ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ನಿರ್ಮಿಸಲಾದ ಶೌಚಾಲಯಗಳು ಬಾಗಿಲುಗಳಿಲ್ಲದೆ, ನಿರ್ವಹಣೆಯಿಲ್ಲದೆ ಸಂಪೂರ್ಣ ಹಾಳಾಗಿವೆ.
ಶೌಚಾಲಯದ ಮುಂಭಾಗದಲ್ಲೇ ಮುಳ್ಳಿನ ಕಂಠಿಗಳು ಬೆಳೆದು ನಿಂತಿರುವುದರಿಂದ ವಿದ್ಯಾರ್ಥಿಗಳು, ಅದರಲ್ಲೂ ಮುಖ್ಯವಾಗಿ ವಿದ್ಯಾರ್ಥಿನಿಯರು ತೀವ್ರ ಪರದಾಟ ನಡೆಸುವಂತಾಗಿದೆ. ಸಮಸ್ಯೆ ತೀವ್ರವಾಗಿದ್ದರೂ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಮಾತ್ರ ಏನು ಹೇಳುತ್ತಿಲ್ಲ. ಸಂಬಂಧಪಟ್ಟ ಶಿಕ್ಷಣಾಧಿಕಾರಿಗಳು ಕಣ್ಣುಮುಚ್ಚಿ ಕುಳಿತಿದ್ದು ವಿದ್ಯಾರ್ಥಿಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಇಂತಹ ಮೂಲಭೂತ ಸೌಕರ್ಯಗಳ ಕೊರತೆಯು ವಿದ್ಯಾರ್ಥಿಗಳ ಆರೋಗ್ಯ ಮತ್ತು ಶಿಕ್ಷಣದ ಮೇಲೆಯೂ ನೇರ ಪರಿಣಾಮ ಬೀರುತ್ತದೆ. ಕೂಡಲೇ ಸಂಬಂಧಪಟ್ಟ ಮೇಲಧಿಕಾರಿಗಳು, ಜನಪ್ರತಿನಿಧಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ, ಶೌಚಾಲಯಗಳ ದುರಸ್ತಿ ಮತ್ತು ನೈರ್ಮಲ್ಯೀಕರಣಕ್ಕೆ ಕ್ರಮ ಕೈಗೊಳ್ಳಬೇಕೆಂದು ವಿದ್ಯಾರ್ಥಿಗಳು ಆಗ್ರಹಿಸಿದರು.
