ಕೊಪ್ಪಳ, ಜು.29: ಜಿಲ್ಲೆಯಲ್ಲಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಿತ್ತನೆ ಮಾಡಿದ ಬೆಳೆಗಳು ಒಣಗುತ್ತಿದ್ದು, ಕೃಷಿ ಚಟುವಟಿಕೆಗಳು ಸಂಪೂರ್ಣ ಹಿನ್ನಡೆಯತ್ತ ಸಾಗಿವೆ. ಕೂಡಲೇ ಜಿಲ್ಲೆಯನ್ನು ತಕ್ಷಣ ಬರಪೀಡಿತ ಪ್ರದೇಶವೆಂದು ಘೋಷಿಸಬೇಕೆಂದು ಒತ್ತಾಯಿಸಿ ರೈತರ ಹಾಗೂ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ.ವಿ. ಚಂದ್ರಶೇಖರ್ ಹಾಗೂ ರೈತ ಸಂಘದ ಮುಖಂಡರ ನೇತೃತ್ವದಲ್ಲಿ ಕೊಪ್ಪಳ ನಗರದ ಬನ್ನಿಕಟ್ಟಿಯಿಂದ ಸರ್ಕಲ್ ಮಾರ್ಗವಾಗಿ ಜಿಲ್ಲಾಡಳಿತ ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ರೈತರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ಕೊಪ್ಪಳ ಜಿಲ್ಲೆಯನ್ನು ತಕ್ಷಣವೇ ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಆಗ್ರಹಿಸಿದರು. ಬಳಿಕ ಅಪರ ಜಿಲ್ಲಾಧಿಕಾರಿ ಸಿದ್ದರಾಮೇಶ್ವರ್ ಅವರಿಗೆ ಮನವಿ ಪತ್ರ ಸಲ್ಲಿಸಿ, ರೈತರ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸುವಂತೆ ಒತ್ತಾಯಿಸಿದರು.
ಮನವಿ ಸ್ವೀಕರಿಸಿದ ಅಧಿಕಾರಿಗಳು ರೈತರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು, ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ.ವಿ. ಚಂದ್ರಶೇಖರ್ ಹಾಗೂ ರೈತ ಸಂಘದ ಮುಖಂಡರು, ರೈತರ ಪರಿಸ್ಥಿತಿಯನ್ನು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ವಾಸ್ತವ ಸ್ಥಿತಿಯ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಆಗ್ರಹಿಸಿದರು.
ಬರಪೀಡಿತ ಪ್ರದೇಶ ಘೋಷಣೆಗೆ ಸರ್ಕಾರವು ಮಳೆಯ ಪ್ರಮಾಣದ ಕೊರತೆ, ಬೆಳೆ ಹಾನಿಯ ಪ್ರಮಾಣ ಹಾಗೂ ಜಲಾಶಯಗಳ ನೀರಿನ ಲಭ್ಯತೆಯನ್ನು ಪರಿಶೀಲಿಸಿ, ರೈತರ ಸಂಕಷ್ಟವನ್ನು ಮನಗಂಡು ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕೆಂದು ಒತ್ತಾಯಿಸಿದರು.
ಇದರ ಜೊತೆಗೆ ಬೆಳೆ ಹಾನಿ ಸಮೀಕ್ಷೆಯನ್ನು ಕೂಡಲೇ ಪೂರ್ಣಗೊಳಿಸಿ ರೈತರಿಗೆ ಸೂಕ್ತ ಬೆಳೆ ಪರಿಹಾರ ಘೋಷಿಸಬೇಕು. ಕೃಷಿ ಸಾಲಗಳ ಮರುಪಾವತಿಗೆ ವಿನಾಯಿತಿ ನೀಡಬೇಕು, ಬೆಳೆ ಸಾಲಗಳ ಮೇಲಿನ ಬಡ್ಡಿ ಮನ್ನಾ ಮಾಡಬೇಕು, ಜಾನುವಾರುಗಳಿಗೆ ಮೇವು ಮತ್ತು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಜೊತೆಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಒಟ್ಟಾರೆ, ಮಳೆಯ ಕೊರತೆಯಿಂದ ಸಂಕಷ್ಟದಲ್ಲಿರುವ ಕೊಪ್ಪಳ ಜಿಲ್ಲೆಯ ರೈತರಿಗೆ ಸರ್ಕಾರ ಯಾವ ರೀತಿಯ ನೆರವು ನೀಡಲಿದೆ ಮತ್ತು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವ ಬಗ್ಗೆ ಯಾವಾಗ ನಿರ್ಧಾರ ಕೈಗೊಳ್ಳಲಿದೆ ಎಂಬುದು ಈಗ ರೈತರಲ್ಲಿ ಕುತೂಹಲ ಮೂಡಿಸಿದೆ.
