ಹಗರಿಬೊಮ್ಮನಹಳ್ಳಿ ಠಾಣೆ ಲಾಕ್ಅಪ್ ಡೆತ್: ಆರೋಪ ಎದುರಿಸುತ್ತಿದ್ದ ಇಬ್ಬರು ಪೊಲೀಸರ ಬಂಧನ
ವಿಜಯನಗರ, ಆಗಸ್ಟ್ 04: ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದ 38 ವರ್ಷದ ದಿನಗೂಲಿ ಕಾರ್ಮಿಕ ಖಲೀಲುಲ್ಲಾ ಅವರ ಲಾಕ್ಅಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯದಲ್ಲಿದ್ದ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಬಂಧಿಸಲಾಗಿದೆ. ಬಂಧಿತರನ್ನು ಹೆಡ್ ಕಾನ್ಸ್ಟೆಬಲ್ ಇಟಗಿ ರಾಘವೇಂದ್ರ ಮತ್ತು ಪೊಲೀಸ್ ಕಾನ್ಸ್ಟೆಬಲ್ ವೆಂಕಟೇಶ್ ಎಂದು ಗುರುತಿಸಲಾಗಿದೆ.
ಮೃತ ಖಲೀಲುಲ್ಲಾ (38) ಅವರು ಹರಪನಹಳ್ಳಿ ಮೂಲದವರಾಗಿದ್ದು, ಪ್ರಸ್ತುತ ಹಗರಿಬೊಮ್ಮನಹಳ್ಳಿಯಲ್ಲಿ ವಾಸಿಸುತ್ತಿದ್ದರು. ಕೌಟುಂಬಿಕ ಕಲಹಕ್ಕೆ ಸಂಬಂಧಿಸಿದ ದೂರಿನ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದರು ಎಂದು ತಿಳಿದುಬಂದಿದೆ.
ಪೊಲೀಸರ ಮಾಹಿತಿ ಪ್ರಕಾರ, ಠಾಣೆಗೆ ಕರೆತರುವ ವೇಳೆ ಖಲೀಲುಲ್ಲಾ ಮತ್ತು ಪೊಲೀಸರ ನಡುವೆ ವಾಗ್ವಾದ ಹಾಗೂ ತಳ್ಳಾಟ ನಡೆದಿದೆ. ಬಳಿಕ ಪೊಲೀಸ್ ವಶದಲ್ಲಿದ್ದಾಗ ಅವರ ಆರೋಗ್ಯದಲ್ಲಿ ಏಕಾಏಕಿ ಏರುಪೇರು ಉಂಟಾಗಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಆಸ್ಪತ್ರೆಗೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.
ಕುಟುಂಬಸ್ಥರಿಂದ ಕಸ್ಟೋಡಿಯಲ್ ಡೆತ್ ಆರೋಪ
ಘಟನೆ ಬಳಿಕ ಖಲೀಲುಲ್ಲಾ ಅವರ ಕುಟುಂಬಸ್ಥರು ಹಾಗೂ ಸಂಬಂಧಿಕರು ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆ ಎದುರು ಜಮಾಯಿಸಿ ಪ್ರತಿಭಟನೆ ನಡೆಸಿದರು. ಇದು ಕಸ್ಟೋಡಿಯಲ್ ಡೆತ್ ಎಂದು ಆರೋಪಿಸಿದ ಕುಟುಂಬಸ್ಥರು, ತಪ್ಪಿತಸ್ಥ ಪೊಲೀಸ್ ಸಿಬ್ಬಂದಿಯನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಕುಟುಂಬದ ದೂರಿನ ಆಧಾರದ ಮೇಲೆ ಕರ್ತವ್ಯದಲ್ಲಿದ್ದ ಇಬ್ಬರು ಪೊಲೀಸ್ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ನಂತರ ಅವರನ್ನು ಬಂಧಿಸಲಾಗಿದೆ.
ಸ್ವತಂತ್ರ ತನಿಖೆಗೆ ಕುಟುಂಬದ ಒತ್ತಾಯ
ಖಲೀಲುಲ್ಲಾ ಕುಟುಂಬಸ್ಥರು ಸ್ಥಳೀಯ ತನಿಖೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು, ಪ್ರಕರಣದ ಬಗ್ಗೆ ಸ್ವತಂತ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. ಅಲ್ಲದೆ, ತನಿಖೆ ಪೂರ್ಣಗೊಳ್ಳುವವರೆಗೆ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

