ಸಿದ್ದರಾಮಯ್ಯ ವಿಡಿಯೋ ಹರಿದಾಡುತ್ತಿರುವ ವಿಚಾರ ಹಾಗೂ ಸ್ಟೇಗಾಗಿ ಕೋರ್ಟ್ ಮೊರೆ ಹೋಗಿರುವು ವಿಚಾರಕ್ಕೆ ಸಂಬಂಧಪಟ್ಟಂತೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಎಕ್ಸ್ನಲ್ಲಿ ಸುದೀರ್ಘ ಪೋಸ್ಟ್ ಮಾಡಿದ್ದಾರೆ.
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್ ಕೋಲಾಹಲ ಎಬ್ಬಿಸಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರು ಈ ವಿಚಾರವಾಗಿ ಬೇಸರ ಹೊರಹಾಕಿದ್ದಾರೆ. ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ನನ್ನ ವಿರುದ್ಧ ಅಪಪ್ರಚಾರ ನಡೆಯುತ್ತಿದೆ. ನನ್ನ ಚಾರಿತ್ರ್ಯಹನನ ಮಾಡಲು ಮಾಡುತ್ತಿರುವ ಕೃತ್ಯ ಇದು, ಸಾರ್ವಜನಿಕರು ಕೂಡಾ ಅನಗತ್ಯವಾಗಿ ಸುಳ್ಳು ಸುದ್ದಿಯನ್ನು ಪ್ರಚಾರ ಮಾಡಬೇಡಿ ಸತ್ಯದ ಪರವಾಗಿ ನಿಲ್ಲಿ ಅಂತ ಮನವಿ ಮಾಡಿದ್ದಾರೆ.
ಸಿದ್ದರಾಮಯ್ಯ ವಿಡಿಯೋ ಹರಿದಾಡುತ್ತಿರುವ ವಿಚಾರ ಹಾಗೂ ಸ್ಟೇಗಾಗಿ ಕೋರ್ಟ್ ಮೊರೆ ಹೋಗಿರುವು ವಿಚಾರಕ್ಕೆ ಸಂಬಂಧಪಟ್ಟಂತೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಎಕ್ಸ್ನಲ್ಲಿ ಸುದೀರ್ಘ ಪೋಸ್ಟ್ ಮಾಡಿದ್ದಾರೆ. ಜೊತೆಗೆ ಹರಿದಾಡುತ್ತಿರುವ ವಿಡಿಯೋ ಬಗ್ಗೆ ತನಿಖೆಗೆ ನಡೆಸುವಂತೆ ನಗರ ಪೊಲೀಸ್ ಕಮಿಷನರ್ಗೆ ದೂರು ನೀಡಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಪೋಸ್ಟ್ನಲ್ಲಿ ಏನಿದೆ?
ಸಾಮಾಜಿಕ ಜಾಲತಾಣಗಳ ವಿವಿಧ ವೇದಿಕೆಗಳಲ್ಲಿ ಹರಿದಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಡಿಯೋಗೆ ನನ್ನ ಹೆಸರನ್ನು ಜೋಡಿಸಿ ಅಪಪ್ರಚಾರ ನಡೆಯುತ್ತಿದೆ. ಗಮನಿಸಿದ್ದೇನೆ. ರಾಜಕೀಯ ದುರುದ್ದೇಶದಿಂದ ನನ್ನ ಚಾರಿತ್ರ್ಯಹನನ ಮಾಡುವ ಪ್ರಯತ್ನದಂತೆ ಕಾಣುತ್ತಿದೆ. ಸ್ಟ್ರಿಂಗ್ ಆಪರೇಷನ್ ವಿಡಿಯೋಗೂ ನನಗೂ ಯಾವುದೇ ಸಂಬಂಧ ಇಲ್ಲ. ಕೆಲವು ಕಿಡಿಗೇಡಿಗಳು ನನ್ನ ವಿರುದ್ದ ಅಪಪ್ರಚಾರದಲ್ಲಿ ತೊಡಗಿದ್ದಾರೆ ಎಂದು ಬೇಸರ ಹೊರಹಾಕಿದ್ದಾರೆ.
ನಾನು ಸಂಪೂರ್ಣ ನಿರಪರಾಧಿ ?
ನನ್ನ ಹೆಸರಿನ ಉಲ್ಲೇಖ ಇರುವ ಸ್ಟ್ರಿಂಗ್ ಆಪರೇಷನ್ ವಿಡಿಯೋ ಯಾವುದೇ ಪತ್ರಿಕೆ, ಚಾನೆಲ್ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಣೆ ಇಲ್ಲವೇ ಪ್ರಸಾರ ಮಾಡದಂತೆ ತಡೆಗಾಗಿ ಬೆಂಗಳೂರು ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದೇನೆ. ಈ ವಿಷಯದಲ್ಲಿ ನಾನು ಸಂಪೂರ್ಣ ನಿರಪರಾಧಿ ಎನ್ನುವುದು ನನ್ನ ಆತ್ಮಸಾಕ್ಷಿಗೆ ತಿಳಿದಿದೆ. ತೆರೆದ ಪುಸ್ತಕದಂತಿರುವ ನನ್ನ ಐದು ದಶಕಗಳ ರಾಜಕೀಯ ಜೀವನದ ಅರಿವು ಇರುವ ರಾಜ್ಯದ ಜನತೆಗೂ ಇದು ಗೊತ್ತಿದೆ.
ಅಂತಿಮವಾಗಿ ಸತ್ಯವೇ ಗೆಲ್ಲುತ್ತದೆ ?
ಆದರೆ ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಸುಳ್ಳನ್ನು ಸತ್ಯವಾಗಿ ಬಿಂಬಿಸುವುದು ಸುಲಭದ ಕೆಲಸ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯ ಕ್ರಮವಾಗಿ ನಾನು ನ್ಯಾಯಾಲಯದ ಮೆಟ್ಟಿಲು ಏರಿದ್ದೇನೆಯೇ ಹೊರತು ಉಳಿದಂತೆ ಯಾವ ಭಯವೂ ನನಗಿಲ್ಲ. ಅಂತಿಮವಾಗಿ ಸತ್ಯವೇ ಗೆಲ್ಲುತ್ತದೆ ಎನ್ನುವ ವಿಶ್ವಾಸವೂ ನನಗಿದೆ. ನಾನು ಸಂಪೂರ್ಣವಾಗಿ ಅಭಿವ್ಯಕ್ತಿ ಸ್ವಾತಂತ್ರ್ಯದ ಪರವಾಗಿ ಇರುವವನು. ಇಲ್ಲಿಯ ವರೆಗಿನ ನನ್ನ ರಾಜಕೀಯ ಜೀವನದಲ್ಲಿ ನಾನೆಂದೂ ಮಾಧ್ಯಮಗಳ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅಡ್ಡಿ ಪಡಿಸಿದವನಲ್ಲ, ಆದರೆ ಕೆಲವು ಮಾಧ್ಯಮಗಳು ಅಭಿವ್ಯಕ್ತಿ ಸ್ವಾತಂತ್ರ್ಯದ ದುರುಪಯೋಗ ನಡೆಸುತ್ತಿರುವ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ನ್ಯಾಯಾಲಯದ ಮೂಲಕ ಪ್ರಕಟಣೆ-ಪ್ರಸಾರಕ್ಕೆ ತಡೆಯಾಜ್ಞೆ ತರಬೇಕಾದ ಪ್ರಸಂಗ ಬಂದಿದೆ.
ಈ ಬಗ್ಗೆ ನನಗೆ ವಿಷಾದವಿದೆ. ಈ ಸ್ಟಿಂಗ್ ಆಪರೇಷನ್ ವಿಡಿಯೋ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸುವಂತೆ ಈಗಾಗಲೇ ನಗರ ಪೊಲೀಸ್ ಆಯುಕ್ತರಿಗೂ ದೂರು ನೀಡಿದ್ದೇನೆ. ತನಿಖೆಯಿಂದ ಸತ್ಯ ಹೊರಬರಲಿದೆ ಎಂಬವಿಶ್ವಾಸವೂ ನನಗಿದೆ. ಅಲ್ಲಿಯ ವರೆಗೆ ಮಾಧ್ಯಮಗಳು ಮಾತ್ರವಲ್ಲ ಸಾರ್ವಜನಿಕರು ಕೂಡಾ ಅನಗತ್ಯವಾಗಿ ಇಂತಹ ಸುಳ್ಳು ಸುದ್ದಿಯನ್ನು ಪ್ರಚಾರ ಮಾಡದೆ ಸತ್ಯದ ಪರವಾಗಿ ನಿಲ್ಲಬೇಕೆಂದು ಕೋರುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮನವಿ ಮಾಡಿದರು.