NWKRTC: 400 special buses will leave Bengaluru today, a huge benefit for the people of North Karnataka! – ಮಹಾನವಮಿ, ಆಯುಧಪೂಜೆ ಹಾಗೂ ವಿಜಯದಶಮಿ ಹಬ್ಬದ ಹಿನ್ನೆಲೆಯಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ 400 ಹೆಚ್ಚುವರಿ ವಿಶೇಷ ಬಸ್ಗಳ ವ್ಯವಸ್ಥೆ ಮಾಡಿದೆ. ಬೆಂಗಳೂರಿನ ಆರು ಪ್ರಮುಖ ಬಸ್ ನಿಲ್ದಾಣಗಳಿಂದ ವಿವಿಧ ಸ್ಥಳಗಳಿಗೆ ವಿಶೇಷ ಬಸ್ಗಳು ಸಂಚರಿಸಲಿವೆ.
ಹುಬ್ಬಳ್ಳಿ: ಮಹಾನವಮಿ, ಆಯುಧಪೂಜೆ ಹಾಗೂ ವಿಜಯದಶಮಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯಾಪ್ತಿಯ ವಿವಿಧ ವಿಭಾಗಗಳಿಂದ 400 ಹೆಚ್ಚುವರಿ ವಿಶೇಷ ಬಸ್ಗಳ ಕಾರ್ಯಾಚರಣೆಗೆ ವ್ಯವಸ್ಥೆ ಮಾಡಲಾಗಿದೆ. ಅಕ್ಟೋಬರ್ 20ರಂದು ಮಹಾನವಮಿ ಹಾಗೂ ಆಯುಧಪೂಜೆ, ಅಕ್ಟೋಬರ್ 21ರಂದು ವಿಜಯದಶಮಿ ಹಬ್ಬ ಇರುವ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಹಾಗೂ ಇತರ ಪ್ರಮುಖ ಸ್ಥಳಗಳಿಂದ ಸ್ವಂತ ಊರುಗಳಿಗೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಬೆಂಗಳೂರಿನ ಪ್ರಮುಖ ಬಸ್ ನಿಲ್ದಾಣಗಳಿಂದ ವಿಶೇಷ ಬಸ್ ಸಂಚಾರ: ಅಕ್ಟೋಬರ್ 16ರಿಂದ 19ರವರೆಗೆ ಬೆಂಗಳೂರಿನ ಪ್ರಮುಖ ಬಸ್ ನಿಲ್ದಾಣಗಳಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯ ವಿವಿಧ ಸ್ಥಳಗಳಿಗೆ ವಿಶೇಷ ಬಸ್ಗಳು ಸಂಚರಿಸಲಿವೆ. ಕೆಂಪೇಗೌಡ ಬಸ್ ನಿಲ್ದಾಣ, ವಿಜಯನಗರ ಟಿಟಿಎಂಸಿ, ಮಲ್ಲೇಶ್ವರಂ, ಶಾರದಾ ಕಾಲನಿ, ಯಶವಂತಪುರ ಟಿಟಿಎಂಸಿ ಹಾಗೂ ಬಸವೇಶ್ವರನಗರ ಟಿಟಿಎಂಸಿ ನಿಲ್ದಾಣಗಳಿಂದ ಈ ವಿಶೇಷ ಬಸ್ಗಳ ಕಾರ್ಯಾಚರಣೆ ನಡೆಯಲಿದೆ.
ಎಂಟು ವಿಭಾಗಗಳಿಂದ 400 ಹೆಚ್ಚುವರಿ ಬಸ್ಗಳು: ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಚಿಕ್ಕೋಡಿ ಹಾಗೂ ಬಾಗಲಕೋಟೆ ವಿಭಾಗಗಳಿಂದ ಹೆಚ್ಚುವರಿ ಬಸ್ಗಳನ್ನು ಕಾರ್ಯಾಚರಣೆಗೊಳಿಸಲಾಗುತ್ತಿದೆ. ಹಬ್ಬದ ಹಿನ್ನೆಲೆಯಲ್ಲಿ ಸ್ವಂತ ಊರುಗಳಿಗೆ ತೆರಳುವ ಪ್ರಯಾಣಿಕರು ಈ ಹೆಚ್ಚುವರಿ ಸಾರಿಗೆ ಸೌಲಭ್ಯದ ಸದುಪಯೋಗ ಪಡೆದುಕೊಳ್ಳುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
