
ಕೂಡ್ಲಿಗಿ: ತಾಲೂಕಿನ ಗುಡೆಕೋಟೆ ಸಮೀಪದ ಕಸಾಪುರ ಬಳಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ರಾಷ್ಟ್ರೀಯ ಬ್ಯಾಂಕ್ (ನಬಾರ್ಡ್) ವತಿಯಿಂದ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ₹4.50 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಹುಣಸೆ ಹಣ್ಣು ಹಾಗೂ ಶೇಂಗಾ ಸಂಸ್ಕರಣೆಗಾಗಿ ರೈತರ ತರಬೇತಿ ಮತ್ತು ಸಾಮಾನ್ಯ ಸೌಲಭ್ಯ ಕೇಂದ್ರವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಒನಕೆ ಓಬವ್ವನ ತವರೂರು ಹಾಗೂ ಓಬವ್ವನ ಧೈರ್ಯ ಈ ಭಾಗದ ಮಹಿಳೆಯರಲ್ಲಿರುವುದು ಸಹಜ, ಇದರ ಜೊತೆಗೆ ಜೀವನೋಪಾಯದ ಹಾದಿಯನ್ನೂ ಇಲ್ಲಿನ ಮಹಿಳೆಯರು ಕಂಡುಕೊಳ್ಳಬೇಕು. ಪರಿಶಿಷ್ಟ ಪಂಗಡದವರ ಜನಸಂಖ್ಯೆ ಹೆಚ್ಚಿದ್ದು, ಶಿಕ್ಷಣ ಮಟ್ಟ ಕಡಿಮೆ ಇದೆ, ಹೀಗಾಗಿ ಏಕಲವ್ಯ ಶಾಲೆಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಸ್ಥಾಪಿಸುವ ಅಗತ್ಯ ಇದೆ. ಮಳೆಯಾಶ್ರಿತ ಪ್ರದೇಶದಲ್ಲಿ 1 ಲಕ್ಷಕ್ಕೂ ಹೆಚ್ಚು ಹುಣಸೆ ಗಿಡ ಬೆಳೆದರೆ ಇನ್ನೂ 10 ಹುಣಸೆ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಬಹುದು. ಈ ಭಾಗದಲ್ಲಿ ರೈತ ತರಬೇತಿ ಕೇಂದ್ರಗಳನ್ನು ಆರಂಭಿಸುವುದರಿಂದ ಸಾವಿರಾರು ರೈತರಿಗೆ ಉಪಯೋಗವಾಗುತ್ತದೆ. ಪ್ರಧಾನಮಂತ್ರಿ ಧನ ಧಾನ್ಯ ಯೋಜನೆಯಿಂದ ಆಹಾರ ಸಂಸ್ಕರಣೆ, ಮೌಲ್ಯವರ್ಧನೆ ಜೊತೆಗೆ ರೈತರ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಲಿದೆ. ಕಲ್ಯಾಣ ಕರ್ನಾಟಕ ಭಾಗವನ್ನು ಅಭಿವೃದ್ಧಿಪಡಿಸುವುದು ಪ್ರಮುಖ ಗುರಿಯಾಗಿದೆ. ಘಟಕದಲ್ಲಿ ಹುಣಸೆ ಹಾಗೂ ಶೇಂಗಾ ಉತ್ಪನ್ನಗಳನ್ನು ತಯಾರಿಸಲು ವ್ಯವಸ್ಥೆ ಮಾಡಲಾಗಿದೆ. ರೈತರ ಆದಾಯವೃದ್ಧಿಗೆ ಸಹಾಯವಾಗಲಿದೆ ಎಂದು ಸಚಿವರು ಆಶಿಸಿದರು.
ಕಾರ್ಯಕ್ರಮದಲ್ಲಿ ಶಾಸಕ ಡಾ. ಎನ್.ಟಿ ಶ್ರೀನಿವಾಸ್ ಮಾತನಾಡಿ ತಾಲೂಕಿನಲ್ಲಿ ಬಾಲ್ಯ ವಿವಾಹ ಮತ್ತು ದೇವದಾಸಿ ಪದ್ಧತಿಯನ್ನು ನಿರ್ಮೂಲನೆ ಮಾಡುವುದು, ಮಹಿಳೆಯರ ರಕ್ತಹೀನತೆ, ಅಪೌಷ್ಟಿಕತೆ ಮತ್ತು ಗುಣಮಟ್ಟದ ಶಿಕ್ಷಣ-ಆರೋಗ್ಯ ಸೌಲಭ್ಯಗಳ ಕೊರತೆ ಇದೆ, ತಾಲೂಕಿನಲ್ಲಿ ಬುಡಕಟ್ಟು ಜನಾಂಗದ ವಿದ್ಯಾರ್ಥಿಗಳಿಗೆ ಏಕಲವ್ಯ ಮಾದರಿ ಶಾಲೆ ನಿರ್ಮಿಸಲು ಮಾನ್ಯ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಗಮನಕ್ಕೆ ತಂದರು. ಕ್ಷೇತ್ರದ ಶಿಕ್ಷಣ, ಆರೋಗ್ಯ, ಮೂಲಸೌಕರ್ಯ, ಕೌಶಲ್ಯಾಭಿವೃದ್ಧಿಗೆ ಅನುದಾನ ಒದಗಿಸುವ ಕುರಿತು ಮನವಿ ಸಲ್ಲಿಸಲಾಯಿತು.
ಬಳ್ಳಾರಿ-ವಿಜಯನಗರ ಸಂಸದ ಇ.ತುಕಾರಾಂ, ಹರಪನಹಳ್ಳಿ ಶಾಸಕಿ ಎಂ.ಪಿ ಲತಾ ಮಲ್ಲಿಕಾರ್ಜುನ, ನಬಾರ್ಡ್ ಅಧ್ಯಕ್ಷ ಶಾಜಿ ಕೆ.ವಿ, ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ಉಮಾ ಮಹಾದೇವನ್, ಹಣಕಾಸು ಕಾರ್ಯದರ್ಶಿ ಎಂ. ನಾಗರಾಜು, ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ, ಕಾರ್ಯನಿರ್ವಾಹಕ ಅಧಿಕಾರಿ ನೋಂಗ್ಡಾಯಿ ಮಹಮ್ಮದ್ ಅಲಿ, ಅಕ್ರಂ ಪಾಷಾ, ತಹಶೀಲ್ದಾರ್ ನೇತ್ರಾವತಿ, ಗ್ರಾ.ಪಂ. ಅಧ್ಯಕ್ಷ ಕೃಷ್ಣ, ಉಪಾಧ್ಯಕ್ಷರು, ಸದಸ್ಯರು, ಅಧಿಕಾರಿಗಳು, ರೈತರು, ಮಹಿಳೆಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
