ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಇತ್ತೀಚೆಗಷ್ಟೇ ನಿಟ್ಟುಸಿರು ಬಿಟ್ಟಿದ್ದ ಮಾಜಿ ಸಚಿವ ಹಾಗೂ ಜೆಡಿಎಸ್ ಶಾಸಕ ಹೆಚ್.ಡಿ. ರೇವಣ್ಣ (H.D. Revanna) ಅವರಿಗೆ ಕರ್ನಾಟಕ ಹೈಕೋರ್ಟ್ ಬಿಗ್ ಶಾಕ್ ನೀಡಿದೆ. ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಕೆ.ಆರ್. ನಗರದ ಮಹಿಳೆ ಅಪಹರಣ ಪ್ರಕರಣವನ್ನು (K.R. Nagar Kidnap Case) ರದ್ದುಗೊಳಿಸುವಂತೆ ಕೋರಿ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ವಿಚಾರಣೆ ಎದುರಿಸುವುದು ಅನಿವಾರ್ಯವಾಗಿದೆ.
ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ (FIR) ಮತ್ತು ಕಾನೂನು ಪ್ರಕ್ರಿಯೆಗಳನ್ನು ರದ್ದುಪಡಿಸಬೇಕು ಎಂದು ಕೋರಿ ಹೆಚ್.ಡಿ. ರೇವಣ್ಣ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಸುನಿಲ್ ದತ್ ಯಾದವ್ (Justice Sunil Dutt Yadav) ಅವರಿದ್ದ ಏಕಸದಸ್ಯ ಪೀಠ, ಪ್ರಕರಣದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದೆ. ಅಷ್ಟೇ ಅಲ್ಲದೆ, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಇದರಿಂದಾಗಿ ರೇವಣ್ಣ ಅವರ ತೂಗುಕತ್ತಿ ಮತ್ತೆ ಮುಂದುವರಿದಂತಾಗಿದೆ.
ಪ್ರಕರಣದ ಹಿನ್ನೆಲೆ:
ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯೊಬ್ಬರನ್ನು ಅಪಹರಣ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಮೈಸೂರು ಜಿಲ್ಲೆಯ ಕೆ.ಆರ್. ನಗರದ ಸಂತ್ರಸ್ತ ಮಹಿಳೆಯನ್ನು ಅವರ ಮನೆಯಿಂದ ಬಲವಂತವಾಗಿ ಕರೆದೊಯ್ದು, ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಕೂಡಿಡಲಾಗಿತ್ತು ಎಂಬುದು ಪ್ರಮುಖ ಆರೋಪ.
ಇದನ್ನೂ ಓದಿ | ಕರ್ನಾಟಕದ ದಾಹ ತೀರಿಸಿ ಎಂದು ಕೇಂದ್ರಕ್ಕೆ ಎಚ್.ಡಿ. ದೇವೇಗೌಡರ ಮನವಿ
ಈ ಪ್ರಕರಣದಲ್ಲಿ ಹೆಚ್.ಡಿ. ರೇವಣ್ಣ ಅವರನ್ನು ಮೊದಲ ಆರೋಪಿ (A1) ಎಂದು ಹೆಸರಿಸಲಾಗಿತ್ತು. ಸಂತ್ರಸ್ತೆಯ ಮಗ ನೀಡಿದ ದೂರಿನನ್ವಯ ಕೆ.ಆರ್. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ಈ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡಕ್ಕೆ (SIT) ಹಸ್ತಾಂತರಿಸಲಾಗಿತ್ತು.
