RCB STAMPADE ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಐಪಿಎಸ್ ಅಧಿಕಾರಿಗಳಿಗೆ ಸರ್ಕಾರ ಕ್ಲೀನ್ಚಿಟ್ ನೀಡಿದೆ. ಮೂವರು ಅಧಿಕಾರಿಗಳ ಮೇಲಿದ್ದ ಎಲ್ಲಾ ಆರೋಪಗಳನ್ನು ಮುಕ್ತಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು, ಜು.16 : ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರದ ಪೊಲೀಸ್ ಆಯುಕ್ತರಾಗಿದ್ದ ಬಿ.ದಯಾನಂದ್ ಸೇರಿ ಮೂವರು ಐಪಿಎಸ್ ಅಧಿಕಾರಿಗಳಿಗೆ ಸರ್ಕಾರ ಕ್ಲೀನ್ಚಿಟ್ ನೀಡಿದೆ. ಇದರಿಂದ ಮೂವರು ಅಧಿಕಾರಿಗಳು ನಿಟ್ಟುಸಿರು ಬಿಟ್ಟಂತಾಗಿದೆ.
ರಾಯಲ್ ಚಾಲೆಂಜರ್ಸ್ ಬೆಂಗಲೂರು ತಂಡ ಐಪಿಎಲ್ ಟೂರ್ನಿಯ 18ನೇ ಆವೃತ್ತಿಯಲ್ಲಿ ಗೆದ್ದು ಕಿರೀಟ ಮುಡಿಗೇರಿಸಿಕೊಂಡಿತ್ತು. 2025ರ ಜೂ.3ರಂದು ಗುಜರಾತ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಆರ್ಸಿಬಿ ಗೆಲುವು ಸಾಧಿಸಿತ್ತು. ಗೆಲುವಿನ ಸಂಭ್ರಮಾಚರಣೆಗೆ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ನೂಕುನುಗ್ಗಲು ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿದ್ದರು.
ಘಟನೆಯಲ್ಲಿ ಹಲವು ಅಭಿಮಾನಿಗಳು ಗಾಯಗೊಂಡಿದ್ದರು. ಆರ್ಸಿಬಿ ಕಾಲ್ತುಳಿತ ಪ್ರಕರಣ ವಿಶ್ವಾದ್ಯಂತ ಸದ್ದು ಮಾಡಿತ್ತು.

ಘಟನೆಗೆ ಸಂಬಂಧಿಸಿದಂತೆ ಅಂದಿನ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್, ಕೇಂದ್ರ ವಿಭಾಗದ ಡಿಸಿಪಿ ಶೇಖರ್ ಎಚ್.ತಕ್ಕಣ್ಣವರ್ ವಿರುದ್ಧ ಇಲಾಖೆ ವಿಚಾರಣೆಗೆ ಸರ್ಕಾರ ಆದೇಶಿಸಿತ್ತು. ಈಗ ಮೂವರು ಅಧಿಕಾರಿಗಳನ್ನು ಎಲ್ಲ ಆರೋಪಗಳಿಂದ ಮುಕ್ತಗೊಳಿಸಿದ್ದು, ಅವರ ವಿರುದ್ಧ ಇದ್ದ ವಿಚಾರಣೆಯನ್ನು ಮುಕ್ತಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
