ಬೆಂಗಳೂರು, ಜುಲೈ 17: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ (85) ನಿಧನ ಹೊಂದಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಜುಲೈ 15ರಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ. ಉಸಿರಾಟದ ಸಮಸ್ಯೆಯಿಂದಾಗಿ ಚೆನ್ನಮ್ಮ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಅವರನ್ನ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಜ್ಞ ವೈದ್ಯ ಡಾ.ಸತ್ಯನಾರಾಯಣ ಅವರು ಚನ್ನಮ್ಮನವರಿಗೆ ಚಿಕಿತ್ಸೆ ನೀಡುತ್ತಿದ್ದರು. ಸಂಜೆ 4 ಗಂಟೆ ಸುಮಾರಿಗೆ ಕಾರ್ಡಿಯಕ್ ಅರೆಸ್ಟ್ ಅಗಿತ್ತು ಎಂದು ಮಣಿಪಾಲ್ ಆಸ್ಪತ್ರೆ ಮಾಹಿತಿ ನೀಡಿದೆ. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಚೆನ್ನಮ್ಮ ಇಹಲೋಕ ತ್ಯಜಿಸಿದ್ದಾರೆ. ಚೆನ್ನಮ್ಮ ಅವರ ನಿಧನದಿಂದಾಗಿ ದೇವೇಗೌಡರ ಕುಟುಂಬಸ್ಥರಲ್ಲಿ ಶೋಕ ಮಡುಗಟ್ಟಿದೆ.
