ಕೊಲ್ಲೂರು, ನಂಜನಗೂಡು ಹಾಗೂ ಚಾಮುಂಡೇಶ್ವರಿ ಕ್ಷೇತ್ರ ಸೇರಿದಂತೆ ಪ್ರಮುಖ ಹುದ್ದೆಗಳಿಗೆ ಐವರು ಅಧಿಕಾರಿಗಳ ನೇಮಕ ಮತ್ತು ವರ್ಗಾವಣೆ
ಬೆಂಗಳೂರು, ಜುಲೈ 25: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ಸಮೂಹ ‘ಎ’ ಕಿರಿಯ ಶ್ರೇಣಿ ಅಧಿಕಾರಿಗಳಿಗೆ ಹಿರಿಯ ಶ್ರೇಣಿ ಹುದ್ದೆಗಳಿಗೆ ಮುಂಬಡ್ತಿ ನೀಡಿ, ವಿವಿಧ ಹುದ್ದೆಗಳಿಗೆ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶ ತಕ್ಷಣದಿಂದಲೇ ಜಾರಿಗೆ ಬರಲಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ಪಿ. ಜಯಮ್ಮ ಅವರನ್ನು ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನಿಯೋಜಿಸಲಾಗಿದೆ.
ನಂಜನಗೂಡಿನ ಶ್ರೀಕಂಠೇಶ್ವರಸ್ವಾಮಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ಸಿ.ಜಿ. ಕೃಷ್ಣ ಅವರನ್ನು ಮೈಸೂರಿನ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ರಾಮನಗರ ಜಿಲ್ಲೆಯ ಶ್ರೀ ಕಬ್ಬಾಳಮ್ಮ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ಎಸ್. ಲಕ್ಷ್ಮೀ ನಾರಾಯಣ ಅವರನ್ನು ನಂಜನಗೂಡಿನ ಶ್ರೀಕಂಠೇಶ್ವರಸ್ವಾಮಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
ಪ್ರಶಾಂತ್ ಕುಮಾರ್ ಶೆಟ್ಟಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತರಾಗಿ ನೇಮಕ ಮಾಡಲಾಗಿದೆ. ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯಾಗಿದ್ದ ಎಂ.ಜೆ. ರೂಪ (ಕೆಎಎಸ್) ಅವರ ಸೇವೆಯನ್ನು ಮೂಲ ಇಲಾಖೆಯಾದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ (DPAR) ಹಿಂದಿರುಗಿಸಲಾಗಿದೆ ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.

