Siddaramaiah didnt contestent: ರಾಜಕೀಯ ಕ್ಷೇತ್ರ ಕಲುಷಿತಗೊಂಡಿರುವುದರಿಂದ 2028ರ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಆದರೆ, ಸಕ್ರಿಯ ರಾಜಕಾರಣದಲ್ಲಿದ್ದು, ಜನರ ಕಷ್ಟ, ಸುಖಗಳಿಗೆ ಧ್ವನಿಯಾಗಿ ನಿಲ್ಲುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕೆ.ಆರ್.ಪೇಟೆ(ಮಂಡ್ಯ), ಜು.27: ಇನ್ನು ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ನಾಲ್ಕು ವರ್ಷಗಳ ಬಳಿಕ ತಮ್ಮ ವಯಸ್ಸು ಹಾಗೂ ಆರೋಗ್ಯದ ಕಾರಣದಿಂದ ಹಿಂದಿನಂತೆ ಉತ್ಸಾಹದಿಂದ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಅವರು ಹೇಳಿದರು.
ರಾಜಕೀಯ ಕ್ಷೇತ್ರ ಇಂದು ಕಲುಷಿತಗೊಂಡಿರುವುದರಿಂದ 2028ರ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಆದರೆ, ಸಕ್ರಿಯ ರಾಜಕಾರಣದಲ್ಲಿದ್ದು, ಜನರ ಕಷ್ಟ, ಸುಖಗಳಿಗೆ ಧ್ವನಿಯಾಗಿ ನಿಲ್ಲುತ್ತೇನೆ ಎಂದು ತಿಳಿಸಿದರು.
ಕೆ.ಆರ್.ಪೇಟೆಯಲ್ಲಿ ಮಾಜಿ ಸ್ಪೀಕರ್ ದಿ.ಕೃಷ್ಣರ 86ನೇ ಜನ್ಮದಿನದ ಅಂಗವಾಗಿ ಪ್ರತಿಷ್ಠಾನದಿಂದ ಆಯೋಜಿಸಿದ್ದ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಈ ಹಿಂದೆ ರಾಜಕೀಯವಾಗಿ ಸ್ಪರ್ಧೆ ಮಾಡಿದಾಗ ಕ್ಷೇತ್ರದ ಜನರೇ ನಮಗೆ ದುಡ್ಡುಕೊಟ್ಟು ಗೆಲ್ಲಿಸಿಕೊಂಡು ಬರುತ್ತಿದ್ದರು. ಆದರೆ, ಇಂದು ಅಂತಹ ಪರಿಸ್ಥಿತಿ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ವರುಣ ಕ್ಷೇತ್ರದ ಜನರು ಮತ್ತೊಮ್ಮೆ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ. ಆದರೆ ನಾನು ಇನ್ನು ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಎಂದು ತೀರ್ಮಾನಿಸಿದ್ದೇನೆ. ಈಗ ನನಗೆ 79 ವರ್ಷ. ನಮ್ಮ ಸರ್ಕಾರದ ಅವಧಿ ಇನ್ನು ಒಂದೂವರೆ ವರ್ಷ. ಆಗ ನನಗೆ 81-82 ವರ್ಷವಾಗಿರುತ್ತದೆ. ಆಗ ಆರೋಗ್ಯವೂ ಇರುವುದಿಲ್ಲ. ಹಿಂದಿನಂತೆ ಉತ್ಸಾಹದಿಂದ ಕೆಲಸ ಮಾಡಲು ಸಾಧ್ಯವಾಗುವುದಿಲ್ಲ ಎಂದು ಹೇಳಿದರು.
“2028ರ ವೇಳೆಗೆ ನನಗೆ 82 ವರ್ಷವಾಗಿರುತ್ತದೆ. ಆಗ ರಾಜಕೀಯ ಜೀವನಕ್ಕೆ 50 ವರ್ಷಗಳು ಪೂರ್ಣಗೊಳ್ಳುತ್ತವೆ. 1978ರಲ್ಲಿ ನಾನು ತಾಲೂಕು ಮಂಡಳಿ ಸದಸ್ಯನಾಗಿ ರಾಜಕೀಯ ಜೀವನ ಆರಂಭಿಸಿದ್ದೆ,” ಎಂದರು.
ಚುನಾವಣೆಯಲ್ಲಿ ಸ್ಪರ್ಧಿಸಿದರೆ ನಾವು ಜನರಿಗೆ ದುಡ್ಡುಕೊಡಬೇಕಾದ ಕಾಲ ಬಂದಿದೆ. ಇಂದು ರಾಜಕಾರಣ ಸಾಕಷ್ಟು ಕಲುಷಿತವಾಗಿದೆ. ಪ್ರಾಮಾಣಿಕ ರಾಜಕಾರಣಕ್ಕೆ ಉಳಿಗಾಲ್ಲವಿಲ್ಲದಂತಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಚುನಾವಣೆಗಳಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.
ದಿ.ಕೃಷ್ಣರನ್ನು ಕ್ಷೇತ್ರದ ಜನ ಬಯಸುತ್ತಿದ್ದರು. ಆದರೆ, ಅವರು ಕಲುಷಿತ ರಾಜಕೀಯ ವ್ಯವಸ್ಥೆಯಿಂದ ನಿವೃತ್ತಿ ಘೋಷಿಸಿ ಸಕ್ರಿಯ ರಾಜಕಾರಣದಿಂದ ದೂರ ಉಳಿದರು. ಜನ ಬಯಸುತ್ತಿರುವಾಗಲೇ ರಾಜಕೀಯ ನಿವೃತ್ತಿ ಘೋಷಿಸಿದ ಕೃಷ್ಣ ಇಂದು ನಮ್ಮೊಂದಿಗಿಲ್ಲ. ಆದರೆ, ಅವರು ಬಿಟ್ಟು ಹೋಗಿರುವ ರಾಜಕೀಯ ಆದರ್ಶಗಳು ನಮ್ಮ ಮುಂದಿವೆ. ಕೃಷ್ಣರಂತೆ ಬದುಕಿನ ಆದರ್ಶಗಳನ್ನು ಬಿಟ್ಟು ಹೋಗಿರುವವರ ನೆನಪಿನ ಕಾರ್ಯಕ್ರಮಗಳು ರಾಜ್ಯದೆಲ್ಲೆಡೆ ನಡೆಯಬೇಕು ಎಂದು ಆಶಿಸಿದರು.
