KSRTC, BMTC Bus Ticket Price Hike: ಕರ್ನಾಟಕದ 4 ಸಾರಿಗೆ ನಿಗಮಗಳ ಆರ್ಥಿಕ ಸಂಕಷ್ಟ ಹಿನ್ನೆಲೆಯಲ್ಲಿ ಸರ್ಕಾರಿ ಬಸ್ಗಳ ಟಿಕೆಟ್ ದರ ಏರಿಕೆಗೆ ಚಿಂತನೆ ನಡೆಸಿದೆ. ದರ ಪರಿಷ್ಕರಣೆ ಕುರಿತು ಸರ್ಕಾರ ಈಗಾಗಲೇ ಸಮಿತಿ ರಚಿಸಿದ್ದು, ಸಮಿತಿ ವರದಿ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ./newsfirstprime/media/media_files/2025/08/05/bmtc-ksrtc-bus-bandh-karnataka-bengaluru-2025-08-05-11-02-36.jpg)
ಬೆಂಗಳೂರು, ಆ.18: ಕೆಎಸ್ಆರ್ಟಿಸಿ (KSRTC), ಬಿಎಂಟಿಸಿ ಸೇರಿದಂತೆ ರಾಜ್ಯದ ನಾಲ್ಕು ಸಾರಿಗೆ ನಿಗಮಗಳು ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಬಸ್ ಟಿಕೆಟ್ ದರ ಏರಿಕೆ ಮಾಡುವ ಕುರಿತು ಚರ್ಚೆ ತೀವ್ರಗೊಂಡಿದೆ. ದರ ಪರಿಷ್ಕರಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ತಜ್ಞರ ಸಮಿತಿ ರಚಿಸಿದ್ದು, ಸಮಿತಿ ನೀಡುವ ವರದಿ ಆಧರಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ಭೈರತಿ ಸುರೇಶ್ ತಿಳಿಸಿದ್ದಾರೆ.
ಮಧ್ಯಪ್ರಾಚ್ಯ ಯುದ್ಧದ ಕಾರಣ ಡೀಸೆಲ್ ದರ ಏರಿಕೆಯಾಗಿದ್ದು, ಇದರಿಂದ ನಾಲ್ಕು ಸಾರಿಗೆ ನಿಗಮಗಳ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಬೀಳುತ್ತಿದೆ ಎಂದು ನಿಗಮಗಳ ಅಧಿಕಾರಿಗಳು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಕೆಎಸ್ಆರ್ಟಿಸಿ ಶೇ 33ರಷ್ಟು ಹಾಗೂ ಬಿಎಂಟಿಸಿ ಶೇ 44ರಷ್ಟು ಟಿಕೆಟ್ ದರ ಏರಿಕೆಗೆ ಮನವಿ ಮಾಡಿದೆ ಎನ್ನಲಾಗಿದೆ.
40 ಕೋಟಿ ರೂ. ಹೆಚ್ಚುವರಿ ಹೊರೆ
ಡೀಸೆಲ್ ದರ ಏರಿಕೆಯಿಂದ ಕೆಎಸ್ಆರ್ಟಿಸಿ, ಬಿಎಂಟಿಸಿ, NWKRTC ಮತ್ತು KKRTC ನಿಗಮಗಳಿಗೆ ತಿಂಗಳಿಗೆ ಸುಮಾರು 40 ಕೋಟಿ ರೂ. ಹೆಚ್ಚುವರಿ ಹೊರೆ ಬೀಳಲಿದೆ ಎಂದು ಅಧಿಕಾರಿಗಳು ಸರ್ಕಾರಕ್ಕೆ ತಿಳಿಸಿದ್ದಾರೆ. ಇದೇ ಪರಿಸ್ಥಿತಿ ಮುಂದುವರಿದರೆ ವಾರ್ಷಿಕವಾಗಿ ಸುಮಾರು 480 ಕೋಟಿ ರೂ. ನಷ್ಟವಾಗುವ ಸಾಧ್ಯತೆಯಿದೆ.
ದರ ಏರಿಕೆ ಕುರಿತು ಮಾತನಾಡಿರುವ ಸಾರಿಗೆ ಸಚಿವ ಭೈರತಿ ಸುರೇಶ್, ಈಗಾಗಲೇ ಆರು ಬಾರಿ ಡೀಸೆಲ್ ದರ ಹೆಚ್ಚಳವಾಗಿದೆ. ಹೀಗಾಗಿ ಟಿಕೆಟ್ ದರ ಪರಿಷ್ಕರಣೆ ಅನಿವಾರ್ಯವಾಗಬಹುದು ಎಂದು ಹೇಳಿದ್ದಾರೆ. ಡೀಸೆಲ್ ದರ ಏರಿಕೆಯಿಂದ ವಾರಕ್ಕೆ 7ರಿಂದ 8 ಕೋಟಿ ರೂ. ನಷ್ಟವಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಟಿಕೆಟ್ ದರ ನಿಗದಿ ಮಾಡುವ ಸಂಬಂಧ ರಾಜ್ಯ ಸರ್ಕಾರ ಸಮಿತಿ ರಚಿಸಿದ್ದು, ನಿವೃತ್ತ ಐಎಎಸ್ ಅಧಿಕಾರಿ ಅತುಲ್ ಕುಮಾರ್ ತಿವಾರಿ ನೇತೃತ್ವದ ಸಮಿತಿ ಈಗಾಗಲೇ ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದೆ. ನಿಗಮಗಳ ಆರ್ಥಿಕ ಪರಿಸ್ಥಿತಿಯನ್ನು ಪರಿಶೀಲಿಸಿ ದರ ಏರಿಕೆ ಕುರಿತು ಶಿಫಾರಸು ಮಾಡುವಂತೆ ಸಮಿತಿಗೆ ಸೂಚಿಸಲಾಗಿದೆ. ಸಮಿತಿಯಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಅತುಲ್ ಕುಮಾರ್ ತಿವಾರಿ ಅಧ್ಯಕ್ಷರಾಗಿದ್ದು, ದ್ವಾರಕನಾಥ್ ಬಾಬು, ನಿವೃತ್ತ ಸರ್ಕಾರಿ ಕಾರ್ಯದರ್ಶಿ ಡಾ. ಅಬ್ದುಲ್ ಪಿಂಜರಿ ಹಾಗೂ ಐಐಎಸ್ಸಿ ಪ್ರತಿನಿಧಿ ಸದಸ್ಯರಾಗಿದ್ದಾರೆ.
ಸಮಿತಿ ತನ್ನ ವರದಿ ಸಲ್ಲಿಸಿದ ಬಳಿಕ ಮುಖ್ಯಮಂತ್ರಿ ಗಮನಕ್ಕೆ ತಂದು ಟಿಕೆಟ್ ದರ ಏರಿಕೆ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಭೈರತಿ ಸುರೇಶ್ ತಿಳಿಸಿದ್ದಾರೆ.
