Soumya Reddy suddenly resigns as Congress Women’s Unit President! What is the reason? Special appeal to CM in letter: ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸೌಮ್ಯ ರೆಡ್ಡಿ ರಾಜೀನಾಮೆ ನೀಡಿದ್ದಾರೆ. ತಮ್ಮ ಎರಡು ವರ್ಷಗಳ ಅಧಿಕಾರಾವಧಿ ಪೂರ್ಣಗೊಂಡಿರುವುದು ಹಾಗೂ ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸೂಕ್ತ ಪ್ರಾತಿನಿಧ್ಯ ಸಿಗದಿರುವುದರ ಕುರಿತು ಅಸಮಾಧಾನ ವ್ಯಕ್ತಪಡಿಸಿ ಅವರು ಹೈಕಮಾಂಡ್ಗೆ ಪತ್ರ ರವಾನಿಸಿದ್ದಾರೆ. ಹೊಸ ಅಧ್ಯಕ್ಷರ ನೇಮಕವಾಗುವವರೆಗೆ ಹುದ್ದೆಯಲ್ಲಿ ಮುಂದುವರಿಯಲಿದ್ದು, ಮುಂದೆಯೂ ಪಕ್ಷದ ಸಾಮಾನ್ಯ ಕಾರ್ಯಕರ್ತೆಯಾಗಿ ದುಡಿಯುವುದಾಗಿ ಅವರು ತಿಳಿಸಿದ್ದಾರೆ.
- ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸ್ಥಾನಕ್ಕೆ ಸೌಮ್ಯ ರೆಡ್ಡಿ ರಾಜೀನಾಮೆ.
- ಸಂಪುಟದಲ್ಲಿ ಮಹಿಳೆಗೆ ಸ್ಥಾನ ಸಿಗದ್ದಕ್ಕೆ ಬೇಸರ ಹೊರ ಹಾಕಿದ ಸೌಮ್ಯ ರೆಡ್ಡಿ.
- ಕೆಲ ತಿಂಗಳ ಹಿಂದೆಯೇ ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷರಿಗೆ ತಮ್ಮ ರಾಜೀನಾಮೆ ಪತ್ರ ರವಾನಿಸಿದ್ದಾರೆ.
![]()
ಬೆಂಗಳೂರು: ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಳೆದ ಆಗಸ್ಟ್ 20 ರಂದೇ ಸೌಮ್ಯ ರೆಡ್ಡಿ ರಾಜೀನಾಮೆ ಸಲ್ಲಿಸಿದ್ದು, ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷರಿಗೆ ತಮ್ಮ ರಾಜೀನಾಮೆ ಪತ್ರ ರವಾನಿಸಿದ್ದಾರೆ.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದಲ್ಲಿಒಬ್ಬ ಮಹಿಳೆಗೂ ಅವಕಾಶ ಸಿಗದಿರುವ ಬಗ್ಗೆ ಅಸಮಾಧಾನಗೊಂಡು ಸೌಮ್ಯ ರೆಡ್ಡಿ ಪದತ್ಯಾಗದ ನಿರ್ಧಾರ ಮಾಡಿದ್ದರು ಎನ್ನಲಾಗಿದೆ. ಸಂಪುಟದಲ್ಲಿ ಮಹಿಳೆಯರಿಗೆ ಸೂಕ್ತ ಪ್ರಾತಿನಿಧ್ಯ ಕಲ್ಪಿಸುವಂತೆ ಅವರು ತಮ್ಮ ರಾಜೀನಾಮೆ ಪತ್ರದಲ್ಲೂ ವಿನಂತಿಸಿದ್ದಾರೆ.
ಹೊಸ ಅಧ್ಯಕ್ಷರ ನೇಮಕವರೆಗೂ ಮುಂದುವರೆಯುವೆ: ಪತ್ರದಲ್ಲಿ ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿರುವ ಸೌಮ್ಯ ರೆಡ್ಡಿ, “ನಾನು ಈ ಹುದ್ದೆಯನ್ನು ಕೇವಲ ಎರಡು ವರ್ಷಗಳ ಅವಧಿಯ ಜವಾಬ್ದಾರಿಯಾಗಿ ಒಪ್ಪಿಕೊಂಡಿದ್ದೆ. ಆ ಅವಧಿ ಈಗ ಪೂರ್ಣಗೊಂಡಿದ್ದು, ಮತ್ತೊಬ್ಬರಿಗೆ ಅವಕಾಶ ನೀಡಲು ರಾಜೀನಾಮೆ ಸಲ್ಲಿಸುತ್ತಿದ್ದೇನೆ” ಎಂದು ಸ್ಪಷ್ಟಪಡಿಸಿದ್ದಾರೆ. ಸುಮಾರು ಎರಡು ತಿಂಗಳ ಹಿಂದೆಯೇ ರಾಜೀನಾಮೆ ಸಲ್ಲಿಸಿದ್ದರೂ ಅದು ಬಹಿರಂಗವಾಗಿರಲಿಲ್ಲ. ಹೊಸ ಅಧ್ಯಕ್ಷರ ನೇಮಕವಾಗುವ ವರೆಗೆ ತಾವು ಹುದ್ದೆಯಲ್ಲಿ ಮುಂದುವರಿಯುವುದಾಗಿ ಸೌಮ್ಯ ರೆಡ್ಡಿ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.
ತಮ್ಮ ಅಧಿಕಾರಾವಧಿಯಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡಿ ಮಹಿಳೆಯರ ಶಿಕ್ಷಣ, ಆರೋಗ್ಯ ಹಾಗೂ ಆರ್ಥಿಕ ಸಬಲೀಕರಣಕ್ಕಾಗಿ ಶ್ರಮಿಸಿದ್ದಾಗಿ ಅವರು ಸ್ಮರಿಸಿದ್ದಾರೆ. ರಾಜ್ಯ ಸರ್ಕಾರದ ‘ಐದು ಗ್ಯಾರಂಟಿ ಯೋಜನೆಗಳು’ ತಳಮಟ್ಟದಲ್ಲಿ ಮಹಿಳಾ ಕ್ರಾಂತಿಯನ್ನೇ ಸೃಷ್ಟಿಸಿರುವುದನ್ನು ಪ್ರತ್ಯಕ್ಷವಾಗಿ ಕಂಡಿರುವುದು ಹೆಮ್ಮೆಯ ಸಂಗತಿ ಎಂದಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷರು, ಮುಖ್ಯಮಂತ್ರಿಗಳು ಹಾಗೂ ಕಾರ್ಯಕರ್ತರಿಗೆ ಧನ್ಯವಾದ ಅರ್ಪಿಸಿರುವ ಅವರು, 2028ರ ವಿಧಾನಸಭಾ ಚುನಾವಣೆ ಹಾಗೂ 2029ರ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿಗಾಗಿ ಒಬ್ಬ ನಿಷ್ಠಾವಂತ ಕಾರ್ಯಕರ್ತೆಯಾಗಿ ದುಡಿಯುವುದಾಗಿ ಭರವಸೆ ನೀಡಿದ್ದಾರೆ.
ಇದೀಗ ಅಧಿಕೃತವಾಗಿ ಬಹಿರಂಗ: ಕಳೆದ ಆಗಸ್ಟ್ 20 ರಂದೇ ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಲ್ಕಾ ಲಾಂಬಾ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದರು. ಆದರೆ, ಸುಮಾರು ಎರಡು ತಿಂಗಳ ಕಾಲ ಗೌಪ್ಯವಾಗಿದ್ದ ಈ ಬೆಳವಣಿಗೆ ಇದೀಗ ಅಧಿಕೃತವಾಗಿ ಬಹಿರಂಗಗೊಂಡಿದೆ ಸೌಮ್ಯ ರೆಡ್ಡಿ ಅವರ ಈ ನಿರ್ಧಾರವು ರಾಜ್ಯ ಕಾಂಗ್ರೆಸ್ನಲ್ಲಿ ಮಹಿಳಾ ಪ್ರಾತಿನಿಧ್ಯ ಮತ್ತು ಸಂಪುಟ ಪುನಾರಚನೆಯ ಸುತ್ತ ಹೊಸ ರಾಜಕೀಯ ಚರ್ಚೆಗೆ ನಾಂದಿ ಹಾಡಿದೆ.
